ಬೆಂಗಳೂರು : ಹಾಸ್ಯ ನಟ ಉಮೇಶ್ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆದಿದೆ. ಸಹೋದರ ರಮೇಶ್ ಅಗ್ನಿ ಸ್ಪರ್ಶ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೇ ಅಕ್ಟೋಬರ್ 10ರಂದು ಜಾರಿಬಿದ್ದು ಉಮೇಶ್ ಪೆಟ್ಟು ಮಾಡಿಕೊಂಡಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿರುವ ಉಮೇಶ್ ಬಹುತೇಕ ಹಾಸ್ಯ ಪಾತ್ರಗಳಲ್ಲೇ ಮಿಂಚಿದ್ದರು.
ತಮ್ಮ ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಎಂ. ಎಸ್ ಉಮೇಶ್ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ತಮ್ಮ ಪರಿಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ್ದಾರೆ.















