ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ ಮುನ್ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಇಂದು ಸದಾಶಿವ ನಗರ ನಿವಾಸದ ಬಳಿ ಮಾತನಾಡಿದ ಅವರು, ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಗಳಿಗೆ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ನೋಡೋಣ ಎಂದರು.
ಸಿಎಂ, ಡಿಸಿಎಂ ಅವರೇ ಎಲ್ಲಾ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವು ಅವರ ಅಭಿಪ್ರಾಯವನ್ನು ಕೇಳುತ್ತೇವೆ ಎಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಈ ವಿಚಾರವನ್ನು ಪತ್ರಿಕೆಗಳಲ್ಲಿ ಓದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.