ಮಂಡ್ಯ: ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈಗಾಗಲೇ ಕುಡಿಯುವ ನೀರಿಗೆ ತೊಂದರೆ ಅನುಭವಿಸುತ್ತಿದ್ದೇವೆ. ಅಣೆಕಟ್ಟೆಯಲ್ಲಿ ನೀರಿಲ್ಲದ ಕಾರಣ ಇನ್ನು ಮುಂದೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದರು.
ಈಗಾಗಲೇ ಬೆಳೆಗಳಿಗೆ ನೀರು ಬಿಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ನಾವು ಅಧಿಕಾರಿಗಳಿಗೆ ಪರಿಸ್ಥಿತಿ ಕುರಿತು ವರದಿ ಮಾಡುತ್ತೇವೆ ಮತ್ತು ಈ ಸಂಬಂಧ ಇಂದು ಸಿಎಂ, ಡಿಸಿಎಂ ಮತ್ತು ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಚಲುವರಾಯಸ್ವಾಮಿ ತಿಳಿಸಿದರು.
ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಅನುಕೂಲಕರವಾದ ತೀರ್ಪು ಬರಲಿದೆ ಎಂಬ ಭರವಸೆ ವ್ಯಕ್ತಪಡಿಸಿದ ಅವರು, ಈಗ ವಿಚಾರಣೆ ಮುಂದೂಡಿರುವುದರಿಂದ ತೀರ್ಪು ಬರುವವರೆಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಮಧ್ಯೆ, ಸುಪ್ರೀಂ ಕೋರ್ಟ್ ತೀರ್ಪಿಗೆ ಮುನ್ನ ತಮಿಳುನಾಡಿಗೆ ನೀರು ಬಿಡುವುದನ್ನು ತಡೆಯುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮುಂದುವರೆಸಿವೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯೂಆರ್ ಸಿ) ಮಧ್ಯಂತರ ಆದೇಶ ಹೊರಡಿಸಿದ ನಂತರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.