ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ ಅಳವಡಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ, ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಲ್ಲ. ಸರ್ಕಾರ ಇರೋದು ಕಾನೂನು ಕಾಪಾಡುವುದಕ್ಕೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕೋ ಬೇಡವೋ..? ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಧರಣಿ ಮಾಡಿದ್ದಕ್ಕೆ ಕರವೇ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಕನ್ನಡ ನಾಮಫಲಕ ಸಂಬಂಧ ನಿಯಮ ಮಾಡಬೇಕೆಂದು ಚಿಂತನೆ ನಡೆಸಲಾಗಿದೆ. ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕವೇ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.














