ದಾವಣಗೆರೆ: ಈ ಬಾರಿ ನೂರಕ್ಕೆ ನೂರರಷ್ಟು ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ. 135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದರು.
ರಾಜ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ರೋಡ್ ಶೋ ನಂತರ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ. ಸ್ವತಂತ್ರ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಅಂಶಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಎಚ್ಚರಿಸಿದರು.