ಬೆಂಗಳೂರು: ನಗರದಲ್ಲಿ ಅನಧಿಕೃತ ಮತ್ತು ಶಿಥಿಲಗೊಂಡ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಶನಿವಾರ(ಅ26) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಾಗಾರಾಭಿವೃದ್ಧಿ ಖಾತೆ ಹೊಂದಿರುವ ಡಿ.ಕೆ.ಶಿವಕುಮಾರ್, ಅನಧಿಕೃತ ಆಸ್ತಿಗಳ ನೋಂದಣಿಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಅತಿಕ್ರಮಣಗಳನ್ನು ತೆಗೆದುಹಾಕಲಾಗುವುದು. ನಾಗರಿಕ ಸಂಸ್ಥೆಗಳು ಮತ್ತು ಯೋಜನಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
”ಕಟ್ಟಡಗಳ ಅನಧಿಕೃತ ನಿರ್ಮಾಣವನ್ನು ನಿಲ್ಲಿಸಲು ನಾವು ನಿರ್ಧರಿಸಿದ್ದೇವೆ. ಹಿಂದಿನ ಸರ್ಕಾರ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳ ಅಧಿಕಾರವನ್ನು ಮೊಟಕುಗೊಳಿಸಿದೆ ಎಂದು ಹೇಳಿದರು.
ಅನಧಿಕೃತ ನಿರ್ಮಾಣವನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲು ನಮ್ಮ ಸರಕಾರ ನಿರ್ಧರಿಸಿದೆ. ಅನಧಿಕೃತ ಆಸ್ತಿಗಳ ನೋಂದಣಿಯನ್ನೂ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವಿಗೆ ಒತ್ತು ನೀಡುತ್ತಿದ್ದೇವೆ ಎಂದರು.
ಬೆಂಗಳೂರಿನಲ್ಲಿ ಪ್ರವಾಹವನ್ನು ತಡೆಗಟ್ಟುವ ಕುರಿತು ಮಾತನಾಡಿ, ಪ್ರವಾಹವನ್ನು ತಡೆಗಟ್ಟಲು 300 ಕಿಮೀ ರಸ್ತೆಗಳನ್ನು ಸ್ಟಾರ್ಮ್ ವಾಟರ್ ಡ್ರೈನ್ಸ್ (SWD) ಜತೆಗೆ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದರು.