ಮೈಸೂರು: ಅಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಇಂದು ಅದೇ ಕ್ಷೇತ್ರದಲ್ಲಿ ನಿಂತು ಸಿದ್ದುಗೆ ಬೆಂಬಲ ನೀಡಿದ್ದಾರೆ. ಅಷ್ಟೇ ಅಲ್ಲ, ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಲ್ಲದೆ, ಸ್ವಪಕ್ಷ ಜೆಡಿಎಸ್ ಗೆ ಟಾಂಗ್ ನೀಡಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರು. ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಹಾಗೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅದೇ ರೀತಿ ಸಿದ್ದರಾಮಯ್ಯ ಸಹ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಜಿ.ಟಿ.ದೇವೇಗೌಡ ಪ್ರತಿಪಾದಿಸಿದರು.
ಈಗಾಗಲೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿದ್ದಾರಲ್ಲಾ? ಮುಡಾ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಎಲ್ಲದಕ್ಕೂ ಸಹ ಸಿಎಂ ಸಿದ್ದರಾಮಯ್ಯ ಕಾರಣ ಅಲ್ಲ. ಕಾನೂನುಬದ್ಧವಾಗಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ. ಎಫ್ಐಆರ್ ದಾಖಲಾದ ತಕ್ಷಣ ರಾಜೀನಾಮೆ ಅಗತ್ಯವಿಲ್ಲ ಎಂದು ಜಿಟಿ ದೇವೇಗೌಡ ಹೇಳಿದರು.