ಶಿಗ್ಗಾವಿ, ನ. 5, 2024: ರಾಜ್ಯದಲ್ಲಿ ಕಾಂಗ್ರೆಸ್ ಶೋಷಿತರು, ದುರ್ಬಲ ವರ್ಗದವರ ಪರ ಮತ್ತು ಅಭಿವೃದ್ಧಿಯ ಆಡಳಿತ ನೀಡುತ್ತಿದ್ದು, ಸರ್ಕಾರಕ್ಕೆ ಇನ್ನಷ್ಟು ಶಕ್ತಿ ನೀಡಲು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಪರವಾಗಿ ಪ್ರಚಾರ ಸಭೆಗಳು ಹಾಗೂ ಪಕ್ಷದ ಮುಖಂಡರೊಂದಿಗಿನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪಂಚ ಗ್ಯಾರಂಟಿಗಳು ಮತ್ತು ಅಭಿವೃದ್ಧಿ ಕಾರ್ಯಗಳಿಂದಾಗಿ ಜನರು ಕಾಂಗ್ರೆಸ್ ಜತೆಗಿದ್ದಾರೆ. ಇದು ಉಪಚುನಾವಣೆಯಲ್ಲೂ ಸಾಬೀತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಉಪ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿದೆ. ಅವರ ನೇತೃತ್ವದಲ್ಲಿ ರಾಜ್ಯ ಪ್ರಗತಿಯತ್ತ ಸಾಗುತ್ತಿದೆ. ಈ ಪ್ರಗತಿಗೆ ಮತ್ತಷ್ಟು ವೇಗ ನೀಡಲು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸರ್ಕಾರವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಕೋರಿದರು.
ಪಕ್ಷದ ಸ್ಥಳೀಯ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ರಾಜ್ಯದಲ್ಲಿ ಸಮರ್ಥ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಕ್ಷದ ನಿಷ್ಠಾವಂತರಿಗೆ ಅವಕಾಶ ನೀಡುವ ಮೂಲಕ ಪಕ್ಷ ಬಲಪಡಿಸುವ ಕಾರ್ಯವನ್ನೂ ಮಾಡುತ್ತಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗಬೇಕಾಗಿದ್ದು, ಈ ಕೆಲಸ ಮಾಡಲು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿ ಎಂದು ಮನವಿ ಮಾಡಿದರು.
ಪಕ್ಷದ ಮುಖಂಡರು, ಸ್ಥಳೀಯ ಕಾರ್ಯಕರ್ತರು ಹಾಗೂ ಬೆಂಬಲಿಗರು ಈ ವೇಳೆ ಹಾಜರಿದ್ದರು.