ಬೆಂಗಳೂರು : ಇತ್ತೀಚಿಗೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದಳು ಎಂಬ ಆರೋಪದ ಮೇಲೆ ಮಹಿಳೆಯನ್ನು ಮರಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟ್ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಮೂವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಏಕಸದಸ್ಯ ಪೀಠ ನಡೆಸಿತು. ಮಹಿಳೆಯ ಮೇಲೆ ಹಲ್ಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಆರೋಪಿಗಳಾದ ಲಕ್ಷ್ಮೀ, ಶಿಲ್ಪಾ ಹಾಗೂ ಸುಂದರ್ ಅವರಿಗೆ ಷರತ್ತುಬದ್ದ ಜಾಮೀನು ನೀಡಿ ಆದೇಶಿಸಿತು.
ಮಾರ್ಚ್ 19ರಂದು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯೊಬ್ಬರು ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ನಂತರ ಈ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಘಟನೆ ಖಂಡಿಸಿ ದಲಿತ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.