ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆ ಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ‘ಈ ಮಸೂದೆ ನಮ್ಮದು’ ಎಂದು ಹೇಳಿಕೊಂಡಿದ್ದಾರೆ.
ಐದು ದಿನಗಳವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನ ನೆನ್ನೆಯಿಂದ ಆರಂಭಗೊಂಡಿದೆ ಇಂದಿನಿಂದ ಕಲಾಪಗಳು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕಲಾಪದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಪ್ರವೇಶಿಸುತ್ತಿರುವ ವೇಳೆ ಮಹಿಳಾ ಮೀಸಲಾತಿ ಮಸೂದೆ ಕುರಿತಂತೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ ‘ಇದು ನಮ್ಮದು, ಅಪ್ನಾ ಹೈ’ ಎಂದಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿದ್ದು ಮಹಿಳಾ ಮೀಸಲಾತಿ ಮಸೂದೆಯನ್ನು ನಾವು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ ಮಸೂದೆಯ ವಿವರಗಳಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಕಲಾಪದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ಕಾರ ಮಂಡಿಸಿದರೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.
ಮಾರ್ಚ್ 9 2018 ರಂದು ಅಂದಿನ ಯುಪಿಎ ಸರ್ಕಾರ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತ್ತು ಆದರೆ ಲೋಕಸಭೆಯಲ್ಲಿ ಈ ವಿಷಯ ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿತ್ತು.