ರಾಯಚೂರು: ‘ಜಿಲ್ಲೆಯ ತಾಲ್ಲೂಕುಗಳಲ್ಲೇ ಅಧಿಕಾರಿಗಳು ಸರಿಯಾಗಿ ಕಾರ್ಮಿಕರ ನೋಂದಣಿ ಮಾಡಿಕೊಂಡಿಲ್ಲ. ಮಾಹಿತಿಯನ್ನೂ ಸಂಗ್ರಹಿಸಲಾಗದಿದ್ದರೆ ಏನು ಕೆಲಸ ಮಾಡುತ್ತೀರಿ. ನಿಮ್ಮ ಬೇಜವಾಬ್ದಾರಿಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಮಿಕ ಇಲಾಖೆಯ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿ ತಾಲ್ಲೂಕಿನಲ್ಲೂ ಸರಿಯಾಗಿ ಕಾರ್ಮಿಕರ ನೋಂದಣಿ ಮಾಡಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳು ಅರ್ಹ ಕಾರ್ಮಿಕರಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಸರ್ಕಾರ ಯೋಜನೆಗಳ ಉದ್ದೇಶವೇ ಈಡೇರುವುದಿಲ್ಲ. ಅಧಿಕಾರಿಗಳು ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಶಾಸಕರಾದ ಕರೆಮ್ಮ ನಾಯಕ, ಮಾನಪ್ಪ ವಜ್ಜಲ್, ಜಿಲ್ಲಾಧಿಕಾರಿ ನಿತೀಶ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಉಪಸ್ಥಿತರಿದ್ದರು.