ಬೆಂಗಳೂರು : ಗುಂಪೊಂದು ಯುವಕನೊಬ್ಬನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಘಟನೆ ಸಂಬಂಧ ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಘಟನೆ: ಹಲ್ಲೆಗೊಳಗಾದ ಯುವಕ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಹೀಗಾಗಿ ಯುವಕ? ಆಕೆಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ. ಈ ವಿಚಾರವನ್ನು ಯುವತಿ ತನ್ನ ಸ್ನೇಹಿತರಿಗೆ ತಿಳಿಸಿದ್ದಳು. ನಂತರ ಮಾತುಕತೆಗೆಂದು ಯುವಕನ್ನು ಕರೆಸಿಕೊಂಡ ಗುಂಪು,? ಆತನನ್ನು ಅಪಹರಿಸಿ ಅಲೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಹಲ್ಲೆಯ ದೃಶ್ಯ ಮೊಬೈಲ್?ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ಸಂಬಂಧ ಹಲ್ಲೆಗೊಳಗಾದ ಯುವಕನ ಪೋಷಕರು ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದರು.















